ಮಂಡ್ಯ: ಮಂಡ್ಯದಲ್ಲಿಂದು ಬೆಂಬಲಿಗರ ಬಹಿರಂಗ ಸಮಾವೇಶದಲ್ಲಿ ಭಾವಪರವಶರಾಗಿ ಮಾತನಾಡಿದ ಅವರು, ಮಂಡ್ಯದ ಜಿಲ್ಲೆಯ ಜನ ನನಗೆ ತಾಯಿ ಸ್ಥಾನ ನೀಡಿದ್ದೀರಿ, ಈ ತಾಯಿಯನ್ನು ಮಕ್ಕಳಿಂದ ದೂರ ಮಾಡಲು ಎಂದಿಗೂ ಸಾಧ್ಯವಿಲ್ಲ. ಸಕ್ಕರೆ ನಾಡು ಮಂಡ್ಯ ಬಿಟ್ಟು ಬೇರೆ ಕಡೆ ನನ್ನ ರಾಜಕೀಯ ಜೀವನವಿಲ್ಲ, ಮಂಡ್ಯ ಮಣ್ಣಿನ ಸೊಸೆಯಾಗಿ ಜಿಲ್ಲೆಯ ಜನರ ಕೈಬಿಡಲು ನಾನು ಇಷ್ಟಪಡುವುದಿಲ್ಲ. ಈ ಮಂಡ್ಯದ ಋಣ ಮತ್ತು ಈ ಮಂಡ್ಯದ ಜನವನ್ನು ನಾನು ಎಂದೆಂದಿಗೂ ಬಿಡುವುದಿಲ್ಲ ಎಂದು ಪ್ರಮಾಣ ಮಾಡಿ ಹೇಳುತ್ತೇನೆ ಎಂದು ಸಂಸದೆ ಸುಮಲತಾ ಪುನರುಚ್ಛರಿಸಿದ್ದಾರೆ.
ಹಠಕ್ಕೆ ಬಿದ್ದು ನಾನು ಮಂಡ್ಯದಲ್ಲಿ ಪಕ್ಷೇತರಳಾಗಿ ಸ್ಪರ್ಧೆ ಮಾಡುವುದಿಲ್ಲ. ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ನನ್ನ ಬೆಂಬಲ ನೀಡುತ್ತೇನೆ. ಕಾಂಗ್ರೆಸ್ ಪಕ್ಷ ಸೇರುವುದಿಲ್ಲ . ಪ್ರಧಾನಿ ನರೇಂದ್ರ ಮೋದಿಯವರ ದೇಶಪರ ಕಾಳಜಿ, ಕೆಲಸಗಳನ್ನು ಮೆಚ್ಚಿ ಬಿಜೆಪಿಗೆ ಬೆಂಬಲ ನೀಡುತ್ತೇನೆ. ರಾಷ್ಟ್ರ ಮಟ್ಟದ ಪಕ್ಷವೊಂದು ನನ್ನ ಬೆಂಬಲಕ್ಕೆ ಇದ್ದಾಗ ಮುಂದಿನ ದಿನಗಳಲ್ಲಿ ನಾನು ಯಾವ ರೀತಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತೇನೆಂದು ನೀವೆಲ್ಲಾ ನೋಡುತ್ತೀರ ಎಂದರು.