ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ
ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಸರ್ಕಾರದ ಸಾಧನೆ ಮತ್ತು ದಿಕ್ಸೂಚಿಗಳ ಬಗ್ಗೆ ಸೋಮವಾರ ಭಾಷಣ ಮಾಡಿದರು.
ಬೆಳಿಗ್ಗೆ ವಿಧಾನಸೌಧದ ಮುಖ್ಯ ದ್ವಾರಕ್ಕೆ ಆಗಮಿಸಿದ ರಾಜ್ಯಪಾಲರನ್ನು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ವಿಧಾನ ಪರಿಷತ್ ನ ಸಭಾಪತಿಗಳಾದ ಬಸವರಾಜ್ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬರಮಾಡಿಕೊಂಡರು.
"ಕರ್ನಾಟಕ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಎಲ್ಲರನ್ನೂ ಸ್ವಾಗತಿಸಿದ ರಾಜ್ಯಪಾಲರು, "ಮಹಾತ್ಮಾ ಗಾಂಧಿಯವರು ಹೇಳಿದಂತೆ ಆಡಳಿತವನ್ನು ಅಂತಿಮ ವ್ಯಕ್ತಿಯ ಕಣ್ಣೀರು ಒರೆಸುವ ಅವಕಾಶವೆಂಬಂತೆ ಬಳಸಿಕೊಳ್ಳಲು ನನ್ನ ಸರ್ಕಾರ ಕಟಿಬದ್ಧವಾಗಿದೆ. ಸರ್ಕಾರವು ರಾಜ್ಯದ ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕವೂ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನ ಮಾಡುತ್ತಿದೆ" ಎಂದು ಹೇಳಿದರು.
"ಸಂವಿಧಾನದ ಆಶಯಗಳಿಗೆ ಪೂರಕವಾಗಿ ಜನ ಕಲ್ಯಾಣವನ್ನೆ ಪ್ರಧಾನ ಧ್ಯೇಯವಾಗಿಟ್ಟುಕೊಂಡು ಕೆಲಸ ಮಾಡುತ್ತಿದೆ. ಸರ್ವರ ಶಾಂತಿ, ಸರ್ವರ ಅಭ್ಯುದಯವೆ ಸಂವಿಧಾನದ ಆಶಯ. ಈ ಆಶಯವನ್ನು ಚಾಚೂ ತಪ್ಪದೆ ಪಾಲಿಸುತ್ತಿದೆ. ಸರ್ಕಾರ ರಾಜ್ಯದ ಅಭಿವೃದ್ಧಿಯ ವೇಗವನ್ನು ಚುರುಕುಗೊಳಿಸುವುದರಲ್ಲಿ ಮತ್ತು ಸರಕಾರದ ಹಣಕಾಸು ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವಲ್ಲಿ ಯಶಸ್ವಿಯಾಗಿದೆ. ಸರ್ಕಾರ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಕಲ್ಯಾಣ ಯೋಜನೆಗಳಿಂದಾಗಿ ರಾಜ್ಯ ಅಭಿವೃದ್ಧಿಯಲ್ಲಿ ಹಿಂದೆ ಬೀಳುತ್ತದೆ ಮತ್ತು ರಾಜ್ಯದ ಹಣಕಾಸು ವ್ಯವಸ್ಥೆ ಹದಗೆಡುತ್ತದೆ ಎಂದು ಹಲವರು ಭವಿಷ್ಯ ನುಡಿದಿದ್ದರು. ಆ ಭವಿಷ್ಯವನ್ನು ಸರಕಾರ ಸುಳ್ಳು ಮಾಡಿದೆ. ಪ್ರತಿಯೊಂದು ವಲಯದಲ್ಲೂ ರಾಜ್ಯವು ಉತ್ತಮವಾದ ಸಾಧನೆಗಳನ್ನು ದಾಖಲಿಸಿದೆ. ರಾಜ್ಯದ ಆದಾಯ ಹೆಚ್ಚುತ್ತಿದೆ. ರಾಜ್ಯಕ್ಕೆ ಖಾಸಗಿ ಬಂಡವಾಳ ದಾಖಲೆ ಪ್ರಮಾಣದಲ್ಲಿ ಹರಿದು ಬರುತ್ತಿದೆ. ಕಲ್ಯಾಣ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನದಿಂದಾಗಿ ಅಸಮಾನತೆಯ ತೀವ್ರತೆ ಕಡಿಮೆಯಾಗುತ್ತಿದೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಜಿಎಸ್‌ಟಿ ಬೆಳವಣಿಗೆ ದರ ಉತ್ತಮವಾಗಿದೆ" ಎಂದು ಶ್ಲಾಘಸಿದರು.
2024-25ನೇ ಸಾಲಿನ ಬಜೆಟ್ನಲ್ಲಿ ಆದೇಶ ಹೊರಡಿಸಬೇಕಾಗಿದ್ದ 344 ಘೋಷಣೆಗಳ ಪೈಕಿ 331 ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಘೋಷಣೆ ಮಾಡಿದ್ದ ಕಾರ್ಯಕ್ರಮಗಳೂ ಸಹ ಸಮರ್ಪಕವಾಗಿ ಅನುಷ್ಠಾನವಾಗುತ್ತಿವೆ. ಇನ್ನುಳಿದ ಘೋಷಣೆಗಳೂ ಆದೇಶ ಹೊರಡಿಸುವ ಹಂತದಲ್ಲಿವೆ ಎಂದು ರಾಜ್ಯಪಾಲರು ಹೇಳಿದರು.
"ಕರ್ನಾಟಕ ಮಾದರಿ ಅಭಿವೃದ್ಧಿಯೆಂದರೆ ಜನಕೇಂದ್ರಿತ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಆಡಳಿತವನ್ನು ರೂಪಿಸುವುದು ಎಂದರ್ಥ. ಹಸಿರು ಇಂಧನ, ಮಹಿಳಾ ಸಬಲೀಕರಣ ಮುಂತಾದವುಗಳೂ ಇದರಲ್ಲಿ ಸೇರುತ್ತವೆ. ಕರ್ನಾಟಕದ ಮಾದರಿಯನ್ನು ಜಗತ್ತಿನ ಅನೇಕ ಅರ್ಥಶಾಸ್ತ್ರಜ್ಞರು ಮತ್ತು ವಿಶ್ವವಿದ್ಯಾಲಯಗಳು ಅಧ್ಯಯನ ಮಾಡುತ್ತಿವೆ. ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು ಹ್ಯೂಮನ್ ರೈಟ್ಸ್ ಹಬ್‌ನ ಬ್ಲಾಗ್‌ನಲ್ಲಿ “ಶೈನಿಂಗ್ ಎ ಲೈಟ್ ಇನ್ ದ ಡಾರ್ಕ್‌ನೆಸ್” ಎಂದು ಮತ್ತು “ಎ ಬ್ಲ್ಯೂ ಪ್ರಿಂಟ್ ಫಾರ್ ದ ವರ್ಲ್ಡ್” ಎಂದು ಈ ಮಾದರಿಯನ್ನು ವ್ಯಾಖ್ಯಾನಿಸಿವೆ. ಈ ಪ್ರಮೇಯದ ಕುರಿತು ತಿಳಿದುಕೊಳ್ಳಲು ವಿಶ್ವಸಂಸ್ಥೆಯ ಮುಖ್ಯಸ್ಥರೆ ರಾಜ್ಯಕ್ಕೆ ಬಂದು ನಮ್ಮ ಯೋಜನೆಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ" ಎಂದು ತಿಳಿಸಿದರು.
"ಸರ್ಕಾರವು ಆಡಳಿತದಲ್ಲಿ ಪಾರದರ್ಶಕತೆ ತರಲು ನಿರಂತರವಾಗಿ ಪ್ರಯತ್ನಿಸುತ್ತಿದೆ. ಈ ಕಾರಣದಿಂದಲೇ ಕಂದಾಯ, ಗ್ರಾಮೀಣಾಭಿವೃದ್ಧಿ, ಅಬಕಾರಿ, ಅರಣ್ಯ ಮುಂತಾದ ಇಲಾಖೆಗಳಲ್ಲಿ ಅಧಿಕಾರಿ ನೌಕರರ ವರ್ಗಾವಣೆಗಳಿಗಾಗಿ ಕೌನ್ಸೆಲಿಂಗ್ ವ್ಯವಸ್ಥೆ ಜಾರಿಗೆ ತಂದಿದೆ. ಜನರಿಗೆ ನೀಡುವ ಸವಲತ್ತುಗಳನ್ನು ಮಧ್ಯವರ್ತಿ ರಹಿತವಾಗಿ ನೀಡಲು ಕ್ರಮವಹಿಸಲಾಗಿದೆ. ಹಿಂದೆ ನಡೆದಿದ್ದ ಭ್ರಷ್ಟಾಚಾರದ ಪ್ರಕರಣಗಳ ತನಿಖೆಗಳು ತಾರ್ಕಿಕ ಅಂತ್ಯ ಕಾಣುವ ಹಂತಕ್ಕೆ ಬಂದಿವೆ" ಎಂದು ರಾಜ್ಯಪಾಲರು ಹೇಳಿದರು.